ಬೆಂಗಳೂರು: ನಗರದ ಕೆ.ಆರ್. ವೃತ್ತದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ಸಂಚಾರ ದಟ್ಟಣೆ ನಡುವೆ ಸಂಭವಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಹಾಗೂ ಅಪಘಾತಕ್ಕೆ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.








