ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ದೆಹಲಿ ಪೊಲೀಸರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ 19 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.
ಇಂಡಿಯನ್ ಮುಜಾಹಿದ್ದೀನ್, ಅಲ್-ಖೈದಾ ಹಾಗೂ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಆರೋಪಿಗಳ ವಿವರಗಳನ್ನು ಪೋಸ್ಟರ್‌ಗಳಲ್ಲಿ ಪ್ರಕಟಿಸಲಾಗಿದೆ. ಈ ವ್ಯಕ್ತಿಗಳ ಕುರಿತು ಯಾವುದೇ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾದರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಉಗ್ರರ ಬಂಧನಕ್ಕೆ ನೆರವಾಗುವಂತಹ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡುವವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.









