ದೇಶದ ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆ ಮತ್ತೆ ಚರ್ಚೆಗೆ ಬಂದಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗುವ ಮೂಲಕ ಕಾರ್ಯರೂಪಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನವೆಂಬರ್ 17 ಹಾಗೂ 18 ರಂದು ನಡೆಯಲಿರುವ ಕಾಮನ್ ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತೀಯ ಪ್ರಾದೇಶಿಕ ಸಮ್ಮೇಳನದ ಲೋಗೋವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅನಾವರಣಗೊಳಿಸಿ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಇದು ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ. ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಮಹಿಳಾ ಮೀಸಲಾತಿ ಪರವಾಗಿವೆ
ಈ ಹಿಂದೆ ರಾಜೀವ್ ಗಾಂಧಿ ಅವರು ಪಂಚಾಯತ್ ನಿಂದ ಹಿಡಿದು ಜಿಲ್ಲಾ ಆಡಳಿತದವರೆಗೆ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ತಂದಿದ್ದರು. ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮೀಸಲಾತಿ ಪರವಾಗಿವೆ ಎನ್ನುವ ಅಭಿಪ್ರಾಯ ನನ್ನದು" ಎಂದು ಹೇಳಿದರು.
ಆಡಳಿತದ ಆಯಕಟ್ಟಿನ ಹುದ್ದೆಗಳಲ್ಲಿ ಮಹಿಳೆಯರೇ ಮೇಲುಗೈ
ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರ ಪ್ರಾಬಲ್ಯ ಸಂತೋಷಕರ ಸಂಗತಿ. ನಮ್ಮ ರಾಜ್ಯದ ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿಗಳು, ವಿಧಾನಸಭೆ ಕಾರ್ಯದರ್ಶಿ, ವಿಧಾನ ಪರಿಷತ್ ಕಾರ್ಯದರ್ಶಿ ಹಾಗೂ ಉಪಸಭಾಪತಿಗಳ ಸ್ಥಾನದಲ್ಲಿ ಮಹಿಳೆಯರೇ ಇದ್ದಾರೆ. ಇವರೆಲ್ಲರಿಗೂ ನಮಸ್ಕರಿಸಿ ನಾವು ಕೆಲಸ ಮಾಡಿಸಿಕೊಳ್ಳುವಂತಹ ಸುಸಂದರ್ಭ ಒದಗಿಬಂದಿದೆ. ಹೆಣ್ಣು ಕುಟುಂಬದ ಕಣ್ಣು. ಮಹಿಳೆ ಸಬಲಳಾದರೆ ಪುರುಷರೂ ಸಬಲರಾಗುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.








