ನಗರದ ಪ್ರಮುಖ ಪ್ರದೇಶ ಎದುರಾದ ಸಂಚಾರ ದಟ್ಟಣೆ ನಿವಾರಣೆಗೆ ರಾಜ್ಯ ಸರ್ಕಾರ ಹೊಸ ಫ್ಲೈಓವರ್ ನಿರ್ಮಿಸಲು ಮುಂದಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್ ಗೆ ತೆರಳುವವರಿಗೆ ಮುಂದೆ ಗುಡ್‌ನ್ಯೂಸ್ ಸಿಗಲಿದೆ. ಬೆಂಗಳೂರಿನ ಉತ್ತರ ಭಾಗದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನ ಸವಾರರ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಹೆಬ್ಬಾಳ ಮಾದರಿಯಲ್ಲಿ ಮೇಲ್ಸೇತುವೆ ತಲೆ ಎತ್ತಲಿದೆ ಎಂದು ಖುದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ನಗರದ ವಿವಿದ ಕಡೆಗಳಲ್ಲಿ ಹಮ್ಮಿಕೊಂಡಿದ್ದ 522.23 ಕೋಟಿ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಡಿಕೆ ಶಿವಕುಮಾರ್ ಮಾತನಾಡಿದರು. ಮೇಲ್ಸೇತುವೆ ಜೊತೆಗೆ ಜಕ್ಕೂರು ವಿಮಾನ ನಿಲ್ದಾಣದ ಎದುರೇ ನೂತನ ಪಾಲಿಕೆ ಕಚೇರಿ ನಿರ್ಮಾಣ ಮಾಡಲು ಚಿಂತನೆ ಇದೆ ಎಂದರು.
ಮೊದಲಿಗೆ ಬ್ಯಾಟರಾಯನಪುರದ ಜಕ್ಕೂರು ರೈಲ್ವೆ ಮೇಲ್ಸೇತುವೆ, ಕೆ.ಆರ್. ಪುರಂನ ಗೆದ್ದಲಹಳ್ಳಿ ರೈಲ್ವೆ ಹಳಿಗೆ ಅಡ್ಡಲಾಗಿ ನಿರ್ಮಿಸಿರುವ ಮಳೆನೀರು ಕಾಲುವೆ ಉದ್ಘಾಟಿಸಿದರು. ಇದಾದ ಬಳಿಕ ಮಾರುತಿ ಸೇವಾನಗರ ಮುಖ್ಯರಸ್ತೆ ಐಒಸಿ ಜಂಕ್ಷನ್ ಬಳಿ ರೋಟರಿ ಮೇಲ್ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
20 ಕಿ.ಮೀ ಟ್ರಾಫಿಕ್ ಜಾಮ್‌ಗೆ ಸಿಗುತ್ತಾ ಮುಕ್ತಿ?
ನಗರದ ಹೃದಯಭಾಗದಿಂದ ಏರ್‌ಪೋರ್ಟ್ ಕಡೆಗೆ ಹೋಗುವವರು ಹಾಗೂ ಉತ್ತರ ಬೆಂಗಳೂರಿನಿಂದ ನಗರದೊಳಗೆ ಬರುವವರು ಪ್ರತಿನಿತ್ಯ ಸಂಚಾರ ದಟ್ಟಣೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು 20 ಕಿ.ಮೀ. ವ್ಯಾಪ್ತಿಯಲ್ಲಿ ಈ ಸಮಸ್ಯೆ ಇದೆ. ವಿಮಾನ ನಿಲ್ದಾಣಕ್ಕೆ ತೆರಳಲು ಈಗಿರುವ ಮಾರ್ಗವನ್ನೇ ಎಲ್ಲರೂ ಅವಲಂಬಿಸಬೇಕಾಗಿದೆ. ಹೀಗಾಗಿ ಇಲ್ಲಿ ಹೊಸ ಫ್ಲೈಓವರ್ ನಿರ್ಮಿಸುವ ಅಗತ್ಯವಿದೆ ಎಂದು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.
ಫ್ಲೈಓವರ್ ಅನ್ನು ಯಾವ ಮಾದರಿಯಲ್ಲಿ ನಿರ್ಮಿಸಬೇಕು ಅಥವಾ ಬೇರೆ ರೀತಿಯ ವ್ಯವಸ್ಥೆ ಮಾಡಬೇಕೇ ಎಂಬುದನ್ನು ತಾಂತ್ರಿಕವಾಗಿ ಪರಿಶೀಲಿಸಬೇಕಿದೆ. ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅಧಿಕಾರಿಗಳು, ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿದ್ದು, ಯಾವ ಮಾರ್ಗದಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.
ನೂತನ ಪಾಲಿಕೆ ಕಚೇರಿ ನಿರ್ಮಾಣಕ್ಕೆ ಸಿದ್ಧತೆ
ಜಕ್ಕೂರು ವಿಮಾನ ನಿಲ್ದಾಣದ ಎದುರು ಪಾಲಿಕೆ ಕಚೇರಿ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕ್ಷೇತ್ರದ ಜನ ಬೆಂಗಳೂರು ಪಾಲಿಕೆಗೆ ಹೋಗಬೇಕಿಲ್ಲ. ನಿಮ್ಮದೇ ಪಾಲಿಕೆ ಕಚೇರಿ ನಿರ್ಮಾಣವಾಗಲಿದೆ. ಬೆಳೆಯುತ್ತಿರುವ ಬೆಂಗಳೂರಿನ ಅಗತ್ಯಗಳಿಗೆ ತಕ್ಕಂತೆ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು. ವಿಮಾನ ನಿಲ್ದಾಣ ನಿರ್ಮಾಣವಾದ ನಂತರ ಈ ಕ್ಷೇತ್ರದ ಆಸ್ತಿ ಬೆಲೆಯೂ ಹೆಚ್ಚಳವಾಗಿದೆ. ಹೊರ ರಾಜ್ಯಗಳ ಜನರೂ ಇಲ್ಲಿ ನೆಲೆಸಿದ್ದು ಅನೇಕರಿಗೆ ಸಹಕಾರಿಯಾಗಲಿದೆ.
ಹಿರಿಯ ರಾಜಕಾರಣಿ ದಿ. ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರಿನಲ್ಲಿ ಹೆಬ್ಬಾಳ ಫ್ಲೈಓವರ್ ನಿರ್ಮಾಣ ಆಗಿತ್ತು. ಬಳಿಕ ಇದುವೇ ಅತ್ಯಂತ ಪ್ರಮುಖವಾದ ಮೂಲಸೌಕರ್ಯ ನಿರ್ಮಾಣವಾಗಿದೆ. ಈ ಮೇಲ್ಸೇತುವೆ ಮೂರು ಕ್ಷೇತ್ರಗಳನ್ನು ಜೋಡಿಸುತ್ತದೆ. ಬೆಂಗಳೂರಿನ ನಾಗರಿಕರ ಸಮಯವನ್ನು ಉಳಿಸಬೇಕೆಂಬ ಉದ್ದೇಶದಿಂದ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.
ಮೇಲ್ಸೇತುವೆ ಕಾಮಗಾರಿಗೆ ಸವಾಲು
ಈ ಮೇಲ್ಸೇತುವೆ ಕಾಮಗಾರಿ ತಾಂತ್ರಿಕವಾಗಿ ಕ್ಲಿಷ್ಟಕರವಾಗಿದೆ. ಆರು ಪಥಗಳ ಫ್ಲೈಓವರ್ ಸುಲಭದ ಕೆಲಸವಲ್ಲ. ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಂಡಿದ್ದೇವೆ. ಜನರ ಸಲಹೆಗಳನ್ನು ಪಡೆದುಕೊಂಡು, ಸಂಚಾರಿ ಪೊಲೀಸರ, ನಾಗರಿಕರ ಸಲಹೆಗಳನ್ನು ಪಡೆದುಕೊಂಡು ಅನುಷ್ಠಾನ ಮಾಡಲಾಗುವುದು ಎಂದರು.
ರಾಜಧಾನಿ ಸಂಪೂರ್ಣ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಮೇಲ್ಸೇತುವೆಗಳು, ಮೆಟ್ರೋ, ಬೆಂಗಳೂರು ಬಿಜಿನೆಸ್ ಕಾರಿಡಾರ್, ಟನಲ್ ರಸ್ತೆ, ಸಬ್ ಅರ್ಬನ್ ರೈಲ್ವೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಕಾಮಗಾರಿಗಳು ಯೋಜನೆ ವ್ಯಾಪ್ತಿಗೆ ಬರಲಿವೆ. ಜನರ ಅಭಿವೃದ್ಧಿಗೆ ಉತ್ತಮ ಆಡಳಿತ ನೀಡಲು ಸರ್ಕಾರ ಬದ್ಧ ಎಂದು ಅವರು ಹೇಳಿದರು.








