ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ನಡೆದಿರುವ ಕ್ಷಿಪಣಿ ದಾಳಿಯಿಂದ ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಯುಎಇ ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ, ಒಮಾನ್ ಸಮುದ್ರ ಪ್ರದೇಶದ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ‘ಮೊಂಬಾಸಾ’ ಮತ್ತು ‘ಅಲ್ ಬಹಿಯಾ’ ಎಂಬ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ ಎಂದು ತಿಳಿಸಲಾಗಿದೆ.
ದಾಳಿಯಲ್ಲಿ ‘ಮೊಂಬಾಸಾ’ ಟ್ಯಾಂಕರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಅಲ್ಲದೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಅವರಲ್ಲಿ ಆರು ಮಂದಿ ಭಾರತೀಯರು ಹಾಗೂ ಇಬ್ಬರು ಉಕ್ರೇನ್ ಪ್ರಜೆಗಳಾಗಿದ್ದಾರೆ. ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕ್ಷಿಪಣಿ ದಾಳಿಯಿಂದ ಎರಡೂ ಟ್ಯಾಂಕರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ, ಸಿಬ್ಬಂದಿ ಸಮಯೋಚಿತವಾಗಿ ಕಾರ್ಯನಿರ್ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಘಟನೆ ಕುರಿತು ಯುಎಇ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಅಂತರರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.









