ಬೆಂಗಳೂರು ನಗರದ ಥಣಿಸಂದ್ರದ ನಾರಾಯಣಪುರದಲ್ಲಿರುವ ಸಾಮರ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಮದರಸಾ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ಆತಂಕ ಮೂಡಿದೆ.
ಮಾಹಿತಿಯ ಪ್ರಕಾರ, ಶಾಲೆಗೆ ನುಗ್ಗಿದ ದುಷ್ಕರ್ಮಿಗಳು ಕಿಟಕಿಯ ಗಾಜುಗಳನ್ನು ಒಡೆದು ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಶಾಲೆಯೊಳಗಿದ್ದ ಸಿಬ್ಬಂದಿ ಹಾಗೂ ಕೆಲ ವಿದ್ಯಾರ್ಥಿಗಳು ಖಾರದ ಪುಡಿ ಬೆರೆಸಿದ ನೀರನ್ನು ಎರಚಿ ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಬಳಿಕ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ದಾಂಧಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.









