ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮೇಲೆ ಮಚ್ಚಿನಿಂದ ದಾಳಿ ನಡೆಸಿದ ಅಮಾನವೀಯ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ದೂರದ ಸಂಬಂಧಿ ಚೇತನ್, ಲಾವಣ್ಯ ಪ್ರೀತಿಯನ್ನು ನಿರಾಕರಿಸಿದರೂ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಘಟನೆ ನಡೆದ ದಿನ ಲಾವಣ್ಯ ಬಸ್ನಲ್ಲಿ ಕುಳಿತಿದ್ದಾಗ ಆಕೆಯನ್ನು ಹಿಂಬಾಲಿಸಿ ಬಂದ ಚೇತನ್, ಬಸ್ನಿಂದ ಕೆಳಗಿಳಿಸಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ನಡೆಸಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಲಾವಣ್ಯರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ವಿಶೇಷ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.









