ಬೆಂಗಳೂರು ನಗರದಲ್ಲಿ ಬ್ಲ್ಯಾಕ್ ಸ್ಪಾಟ್ ಕ್ಲೀನಿಂಗ್, ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಇದೀಗ ಫುಟ್ಪಾತ್ನಲ್ಲಿ ಮೋಟಾರು ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಪಾದಚಾರಿ ಮಾರ್ಗದಲ್ಲಿ ಬೈಕ್ ಸೇರಿದಂತೆ ಯಾವುದೇ ಮೋಟಾರು ವಾಹನ ಚಲಾಯಿಸುವವರಿಗೆ ಕಟ್ಟುನಿಟ್ಟಿನ ದಂಡ ವಿಧಿಸುವ ಕುರಿತು ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ, ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರಿಗೆ ವಿಧಿಸಲಾಗುತ್ತಿರುವ ದಂಡವನ್ನು ₹5,000ಕ್ಕೆ ಹೆಚ್ಚಿಸುವಂತೆ ಸಾರಿಗೆ ಸಚಿವರಿಗೆ ಪತ್ರ ಬರೆದು ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ. ಈ ಕ್ರಮದ ಮೂಲಕ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವುದು ಹಾಗೂ ಫುಟ್ಪಾತ್ಗಳನ್ನು ವಾಹನಗಳ ಅತಿಕ್ರಮಣದಿಂದ ಮುಕ್ತಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.
ನಗರದಲ್ಲಿ ಸಂಚಾರ ಶಿಸ್ತು ಕಾಪಾಡಲು ಹಾಗೂ ಪಾದಚಾರಿಗಳಿಗೆ ಸುರಕ್ಷಿತ ಸಂಚಾರ ವಾತಾವರಣ ಕಲ್ಪಿಸಲು ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದೆ. ದಂಡದ ಪ್ರಮಾಣ ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತರೆ, ಫುಟ್ಪಾತ್ನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.









