ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ನೀಟ್ (NEET) ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಮೃತ ವಿದ್ಯಾರ್ಥಿನಿಯಾಗಿದ್ದು, ಈ ಘಟನೆ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.
ಕುಟುಂಬದವರ ಮಾಹಿತಿ ಪ್ರಕಾರ, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅಂಕಿತಾಗೆ ಕೇವಲ 166 ಅಂಕಗಳು ಬಂದಿದ್ದವು. ನಿರೀಕ್ಷೆಗಿಂತ ಕಡಿಮೆ ಅಂಕ ಬಂದ ಕಾರಣ ಆಕೆ ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದಳು ಎನ್ನಲಾಗಿದೆ. ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಮನೆಯಲ್ಲಿರುವ ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದ್ದು, ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾನಸಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.









