ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ತಡವಾಗಿ ಆಗಮಿಸಿದ್ದರಿಂದ ಮುಂಭಾಗದ ಆಸನಗಳು ಭರ್ತಿಯಾಗಿದ್ದವು. ಹೀಗಾಗಿ ಖಾಲಿ ಇದ್ದ ಕುರ್ಚಿಯಲ್ಲಿ ಕುಳಿತುಕೊಳ್ಳಬೇಕಾಯಿತು. ಇದರಲ್ಲಿ ಯಾವುದೇ ಕಡೆಗಣನೆಯಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ತಾವು ಐದನೇ ಸಾಲಿನಲ್ಲಿ ಕುಳಿತಿದ್ದ ವಿಚಾರವಾಗಿ ಎದ್ದಿರುವ ಚರ್ಚೆಗೆ ಉತ್ತರಿಸಿದರು. ಕಾರ್ಯಕ್ರಮಕ್ಕೆ ತಡವಾಗಿ ತೆರಳಿದ್ದರಿಂದ ಮುಂಭಾಗದ ಸಾಲುಗಳಲ್ಲಿ ಆಸನಗಳು ಲಭ್ಯವಿರಲಿಲ್ಲ. ಹೀಗಾಗಿ ಖಾಲಿ ಇದ್ದ ಆಸನದಲ್ಲಿ ಕುಳಿತಿದ್ದೆ. ಇದನ್ನು ರಾಜಕೀಯವಾಗಿ ವಿಶ್ಲೇಷಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.
ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಕ್ಕೆ ಯಾವುದೇ ಸತ್ಯವಿಲ್ಲ ಎಂಬ ಧಾಟಿಯಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಕಾರ್ಯಕ್ರಮದಲ್ಲಿ ಆಸನದ ವ್ಯವಸ್ಥೆ ಕುರಿತು ಅನಗತ್ಯ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ
ಇದೇ ವೇಳೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ತಮಗೆ ಈಗ 80 ವರ್ಷ ವಯಸ್ಸಾಗಿದೆ. ವಯೋಸಹಜ ಕಾರಣಗಳಿಂದಾಗಿ ಹಿಂದಿನಂತೆ ಓಡಾಡಿ ಚುನಾವಣಾ ಪ್ರಚಾರ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.
ಅಭಿಮಾನಿಗಳು ಹಾಗೂ ಬೆಂಬಲಿಗರು ಮುಂದಿನ ಚುನಾವಣೆಯಲ್ಲಿಯೂ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ವಯಸ್ಸಿನ ಕಾರಣದಿಂದಾಗಿ ನಿರಂತರವಾಗಿ ಕ್ಷೇತ್ರಗಳಲ್ಲಿ ಓಡಾಡುವುದು ಮತ್ತು ಚುನಾವಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.
5ನೇ ಸಾಲಿನ ಆಸನದ ಸುತ್ತ ರಾಜಕೀಯ ಚರ್ಚೆ
ಇತ್ತೀಚೆಗೆ ಸೋನಿಯಾ ಗಾಂಧಿ ಅವರ 'Belonging: A Journey of Love' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಕುಳಿತಿದ್ದ ಫೋಟೋ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮುಂಭಾಗದ ಸಾಲಿನಲ್ಲಿ ಆಸನ ನೀಡದೆ ಐದನೇ ಸಾಲಿನಲ್ಲಿ ಕೂರಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.
ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸಮರ್ಥಿಸಿಕೊಂಡಿದ್ದರು.
ಆದರೆ ಇದೀಗ ಸ್ವತಃ ಸಿದ್ದರಾಮಯ್ಯ ಅವರೇ ಕಾರ್ಯಕ್ರಮಕ್ಕೆ ತಡವಾಗಿ ತೆರಳಿದ್ದರಿಂದ ಖಾಲಿ ಇದ್ದ ಆಸನದಲ್ಲಿ ಕುಳಿತುಕೊಳ್ಳಬೇಕಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಐದನೇ ಸಾಲಿನ ಆಸನದ ಸುತ್ತ ನಡೆಯುತ್ತಿದ್ದ ಚರ್ಚೆಗೆ ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ.
ಯತೀಂದ್ರನಿಗೆ ಆಶೀರ್ವಾದ ಮಾಡಿ
ಇನ್ನೂ ಮುಂದಿನ ಚುನಾವಣೆಯಲ್ಲಿ ವರುಣ ಕ್ಷೇತ್ರದ 2028ರ ಚುನಾವಣೆಯಲ್ಲಿ ಮಗ ಯತೀಂದ್ರಗೆ ನನ್ನ ರೀತಿಯಲ್ಲಿ ಸಹಕಾರ ಹಾಗೂ ಬೆಂಬಲವನ್ನು ನೀಡಬೇಕು. ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗದಿದ್ದರೆ, ಮಗನಿಗೆ ಬೆಂಬಲಿಸಿ ಎಂದು ಬುಧವಾರ ವರುಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ 26ಕ್ಕೆ ಬೃಹತ್ ಸಂವಿಧಾನ ದಿನಾಚರಣೆ ಸಭೆ
ಮೈಸೂರಿನಲ್ಲಿ ನವೆಂಬರ್ 26 ರಂದು ಸಮಾಜ ಕಲ್ಯಾಣ ಇಲಾಖೆಯಿಂದ ಬೃಹತ್ ಸಂವಿಧಾನ ದಿನಾಚರಣೆ ಸಭೆ ಆಯೋಜನೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಭೆಯಲ್ಲಿ, ಕಾರ್ಯಕ್ರಮದ ಸಿದ್ದತೆ, ಉದ್ದೇಶ ಹಾಗೂ ಇತರ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.








