ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗಾಗಿ ರಾಜ್ಯ ಸರ್ಕಾರ ₹11 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈಗಾಗಲೇ 120 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ನಗರದ ಕಲ್ಟೆಕ್ಸ್ ಸರ್ಕಲ್ ಸಮೀಪದ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳ ಜೊತೆಗೆ ಹೆಚ್ಚುವರಿಯಾಗಿ 400 ಫಲಾನುಭವಿಗಳನ್ನು ಆಯ್ಕೆ ಮಾಡಿ ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ. ವಿವಿಧ ಯೋಜನೆಗಳಡಿ ₹11.70 ಕೋಟಿ ಅನುದಾನ ಮಂಜೂರಾಗಿದ್ದು, ಅನುಗ್ರಹ ಯೋಜನೆಗೆ ₹17 ಕೋಟಿ ಮಂಜೂರು ಮಾಡಲಾಗಿದೆ. ಈ ಪೈಕಿ ₹11 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದರು.









