ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವವನ್ನು ತಲುಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ.
ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ, ಹಕ್ಕು ಮತ್ತು ಸಮಾನತೆಯ ಅವಕಾಶ ಕಲ್ಪಿಸಿದ ಸಂವಿಧಾನ ರಚನೆಯ ಮಹನೀಯರಿಗೆ ಕೋಟಿ ನಮನಗಳನ್ನು ಸಲ್ಲಿಸಬೇಕು. ಸಂವಿಧಾನ ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಭಂಡಾರ. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿದ ಪವಿತ್ರ ಗ್ರಂಥ. ಮನೆ ನಿರ್ಮಾಣಕ್ಕೆ ನೀಲನಕ್ಷೆ ಹೇಗೆ ಅಗತ್ಯವೋ, ದೇಶದ ನಿರ್ಮಾಣಕ್ಕೂ ಸಂವಿಧಾನದ ಬುನಾದಿ ಅಷ್ಟೇ ಮುಖ್ಯ.
ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಪಂಚಾಯಿತಿ ಸದಸ್ಯರಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ನ್ಯಾಯ ಸಿಗದಿದ್ದಾಗ ನ್ಯಾಯಾಲಯದ ಮೆಟ್ಟಿಲೇರಿ, ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಕೇಳುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿಹಿಡಿದಿದೆ.
ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ, ಸ್ಫೂರ್ತಿ ಮತ್ತು ಪ್ರೇರಣೆ ನೀಡಿರುವುದು ಸಂವಿಧಾನ.
ಅಧಿಕಾರ ನೀಡುವುದರ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಅದು ನಮಗೆ ನೀಡಿದೆ. ಸಂವಿಧಾನ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ಒದಗಿಸುವ ವ್ಯವಸ್ಥೆಯನ್ನು ರೂಪಿಸಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು.
ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರ್ಕಾರದ ಮೇಲಷ್ಟೇ ಇಲ್ಲ. ಪ್ರತಿಯೊಬ್ಬ ಭಾರತೀಯನ ಮೇಲೂ ಇದೆ. ಕರ್ನಾಟಕದ 12 ಮಂದಿ ಸಂವಿಧಾನ ರಚನೆಯ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಹಿರಿಯರು ಸ್ಮರಿಸಿದ್ದಾರೆ. ಕೆ.ಸಿ. ರೆಡ್ಡಿ, ಎಸ್. ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ಮಹನೀಯರ ಕೊಡುಗೆ ಮಹತ್ವದ್ದಾಗಿದೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಂವಿಧಾನದ ಆಶಯಗಳೇ ಸಮಸಮಾಜದ ಅಡಿಪಾಯ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ನವೆಂಬರ್ 26ರ ಗುರುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿ.ಕೆ ಶಿವಕುಮಾರ್ ಅವರು ಸಂವಿಧಾನದ ಪೀಠಿಕೆ ಓದುವ ಮೂಲಕ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಇದೇ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು








